ಕಾಶಿಪಟ್ಣ, ಜೂನ್ 24: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣದಲ್ಲಿರುವ ದಾರುನ್ನೂರ್ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರ ಅಂತಿಮ ವಿಧಿ ವಿಧಾನ ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ಸಚಿವ ಯು.ಟಿ. ಖಾದರ್ ಅವರು ದಿವಂಗತ ಖಾಝಿ ತ್ವಾಕ ಅಹ್ಮದ್ ಮುಸ್ಲಿಯಾರ್ ಅವರಿಗೆ ಅಂತಿಮ ನಮನ ಸಲ್ಲಿಸಿ, ಅವರ ಅಗಲಿಕೆಯಿಂದ ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಸಮಾಜಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕ ಮುಖಂಡರು, ಜನಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಮತ್ತು ಸಾರ್ವಜನಿಕರು ಭಾಗವಹಿಸಿ ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು.
ತ್ವಾಕ ಅಹ್ಮದ್ ಮುಸ್ಲಿಯಾರ್ ಅವರು ತಮ್ಮ ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಗಳ ಮೂಲಕ ಜನಮನದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದು, ಅವರ ಸೇವೆಯನ್ನು ಸಮಾಜ ಸದಾ ಸ್ಮರಿಸಲಿದೆ ಎಂದು ಹಲವರು ಅಭಿಪ್ರಾಯಪಟ್ಟರು.

